ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಿ.ಎಂ ವಿಡಿಯೋ ಸಂವಾದ

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಿ.ಎಂ ವಿಡಿಯೋ ಸಂವಾದ

ಕೊಪ್ಪಳ : ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ಯಾವುದೇ ಜೀವಹಾನಿ ಹಾಗೂ ಇತರೆ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಮಂಗಳವಾರ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕ ಮಗಳೂರು, ಶಿವಮೊಗ್ಗ, ಕಲಬುರ್ಗಿ, ಕೊಪ್ಪಳ, ವಿಜಯನಗರ, ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದ ನಡೆಸಿ ರಾಜ್ಯದಲ್ಲಿ ಹಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದ ಆಗಿರುವ ಹಾನಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಿದರು.

ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸತತವಾಗಿ ಪ್ರವಾಹ, ಭೂಕುಸಿತ ಅನುಭವಿಸುತ್ತಿದ್ದು, ಈ ವರ್ಷ ಯಾವುದೇ ಸಂದರ್ಭದಲ್ಲಿ ಪ್ರವಾಹವನ್ನು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ತೆಗೆದುಕೊಳ್ಳಬೇಕು. ಮತ್ತು ವಯೋವೃದ್ಧರು, ವಿಕಲಾಂಗರು, ಮಹಿಳೆ ಮತ್ತು ಮಕ್ಕಳ ಬಗ್ಗೆ ಪ್ರವಾಹ ಸಂದರ್ಭದಲ್ಲಿ ಮುಂಜಾಗ್ರತೆ ವಹಿಸಬೇಕು. ಆಯಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ, ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಜುಲೈ 26 ರವರೆಗೆ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದರಿಂದ ಮುಂಜಾಗ್ರತೆ ವಹಿಸುವುದು ಅವಶ್ಯಕವಾಗಿದೆ ಎಂದರು.

ಪ್ರವಾಹ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ತಕ್ಷಣ ನನ್ನ ಗಮನಕ್ಕೆ ತರಬೇಕು ಮತ್ತು ಯವುದೇ ಹಣಕಾಸಿನ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಉಜಿನಿ ಡ್ಯಾಂನಿಂದ ನೀರು ಬಿಟ್ಟರೆ ಬೆಳಗಾಂ, ವಿಜಯಪುರ ಮತ್ತು ಕಲಬುರ್ಗಿ ಗಡಿ ಜಿಲ್ಲೆಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಸೂಚಿಸಿದರು.

ಈ ವೇಳೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಜಿಲ್ಲೆಯ ಮಾಹಿತಿಯನ್ನು ಸಿ.ಎಂ ಅವರಿಗೆ ವಿವರಿಸಿ, ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷದ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ನಿಧಿಯಿಂದ ಈವರೆಗೆ ಪ್ರವಾಹದಿಂದ ಹಾನಿಗೊಳಗಾದವರಿಗೆ ಪರಿಹಾರವನ್ನು ನೀಡಲಾಗಿದೆ. ಪ್ರವಾಹ ಪರಿಸ್ಥಿತಿಯ ಕುರಿತು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಜಿ.ಪಂ ಉಪಕಾರ್ಯದರ್ಶಿ ಶರಣಬಸವರಾಜ, ಜಂಟಿ ಕೃಷಿ ನಿರ್ದೇಶಕರಾದ ಶಿವಕುಮಾರ, ಉಪ ಕೃಷಿ ನಿರ್ದೇಶಕರಾದ ಸಿದ್ದೇಶ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related