ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಕೋರಿದ ಸಿಎಂ

ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಕೋರಿದ ಸಿಎಂ

ಬೆಂಗಳೂರು: ದೇಶದಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡುವ ಮೂಲಕ 75 ನೆಯ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಇನ್ನು ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾಡಿನ ಜನತೆಗೆ ಸಂದೇಶ ನೀಡುವ ಮೂಲಕ ಶುಭ ಕೋರಿದ್ದಾರೆ.

ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2023ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.

ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ ಎಂದು ತ್ರಿಕರಣಪೂರ್ವಕವಾಗಿ ನಂಬಿಕೊಂಡು ಬಂದಿರುವ ನಮ್ಮ ಸರ್ಕಾರ, ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ ಸರ್ವರಿಗೂ ಸಮಪಾಲು ಸಿಗಬೇಕೆಂಬ ಸರ್ವೋದಯದ ಉದಾತ್ತ ಉದ್ದೇಶವನ್ನು ಹೊಂದಿದೆ.

ಸಂವಿಧಾನ ಎನ್ನುವುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ. ಇತ್ತೀಚೆಗೆ ಸಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಈ ಖಂಡನೆಗೆ ನಾನೂ ದನಿಗೂಡಿಸುತ್ತೇನೆ ಎಂದರು.

Related