ಮೈಸೂರು : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ಶಾಲಾ ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಿರುವುದರಿಂದ ರಾಜ್ಯದಲ್ಲಿ ನವೆಂಬರ್ ತಿಂಗಳಿನಿಂದ ತೆರೆಯಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳನ್ನು ಪುನರಾಂಭಿಸಲು ಯುಜಿಸಿ ಎಲ್ಲಾ ರಾಜ್ಯಗಳಿಗೆ ಅನುಮತಿ ಕೊಟ್ಟಿದೆ. ಆಯಾ ರಾಜ್ಯಗಳೇ ಅಂತಿಮ ನಿರ್ಧಾರ ಕೈಗೊಳ್ಳಲು ಸೂಚನೆ ಕೊಟ್ಟಿರುವುದರಿಂದ ನವೆಂಬರ್‌ನಲ್ಲಿ ಪ್ರಾರಂಭಿಸುವ ಕುರಿತು ಸರ್ಕಾರ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
ಮೈಸೂರು ವಿವಿಯ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಶಾಲಾಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ, ಶಿಕ್ಷಣ ತಜ್ಞರು ಹಾಗೂ ವಿವಿಧ ವಲಯದ ಗಣ್ಯರ ಜೊತೆ ಪೋಷಕರು ಮತ್ತು ಮಕ್ಕಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬ ಆಶ್ವಾಸನೆ ನೀಡಿದರು.