ಚಿಕ್ಕಬಳ್ಳಾಪುರ: ಬಿಜೆಪಿ ಸದಸ್ಯತ್ವ ಅಭಿಯಾನದಡಿ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ1 ಲಕ್ಷ ಜನರ ಹೆಸರು ನೋಂದಾಯಿಸುವ ಗುರಿ ಹೊಂದಿದ್ದು, ಇದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಂಸದ ಡಾ.ಕೆ. ಸುಧಾಕರ್ ಕರೆ ನೀಡಿದರು.
ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಒಂದು ಪಕ್ಷಕ್ಕೆ ಆಧಾರಸ್ತಂಭ ಎಂದರೆ ಅದು ಸಕ್ರಿಯ ಕಾರ್ಯಕರ್ತರು. ಬಿಜೆಪಿ ಇಡೀ ಜಗತ್ತಿನಲ್ಲಿ ಅತಿ ದೊಡ್ಡ ರಾಜಕೀಯ ಪಕ್ಷ. ಸುಮಾರು 20 ಕೋಟಿ ಸದಸ್ಯರು ಈ ಪಕ್ಷದಲ್ಲಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 2.10 ಲಕ್ಷ ಮತದಾರರಿದ್ದಾರೆ. ಮತದಾರರನ್ನು ಈಗಲೇ ಬಿಜೆಪಿಯ ಕುಟುಂಬದ ಸದಸ್ಯರನ್ನಾಗಿ ಮಾಡಲು ಇದು ಸುವರ್ಣಾವಕಾಶ ಎಂದರು.
ಬಿಜೆಪಿ ಸದಸ್ಯತ್ವ ಅಭಿಯಾನದಡಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ1 ಲಕ್ಷ ಜನರ ಹೆಸರನ್ನು ಪಕ್ಷಕ್ಕೆ ನೋಂದಾಯಿಸಬೇಕು ಎಂಬ ಗುರಿಯನ್ನು ನಾನು ನೀಡುತ್ತಿದ್ದು, ಎಲ್ಲ ಕಾರ್ಯಕರ್ತರು ಇದಕ್ಕಾಗಿ ಶ್ರಮಿಸಬೇಕು. ಒಂದು ಬೂತ್ ವ್ಯಾಪ್ತಿಯಲ್ಲಿ ಶೇ.50 ರಷ್ಟು ಜನರನ್ನು ಸದಸ್ಯರನ್ನಾಗಿಸಿದರೆ, ಮುಂದಿನ ಚುನಾವಣೆಗೆ ಅನುಕೂಲವಾಗುತ್ತದೆ ಎಂದರು.
ಟೇಪ್ ಕತ್ತರಿಸುವ ಕಾಂಗ್ರೆಸ್
ಕೃಷಿ ಸಮ್ಮಾನ್, ಫಸಲ್ ಬಿಮಾ, ಜಲಜೀವನ್ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳಿಂದಾಗಿ ಬಿಜೆಪಿ ಮೇಲೆ ಜನರಿಗೆ ಹೆಚ್ಚು ವಿಶ್ವಾಸ ಮೂಡಿದೆ. ಇತ್ತೀಚೆಗೆ 121 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳನ್ನು ಜಿಲ್ಲೆಗೆ ನೀಡಲಾಗಿದೆ. ಆದರೆ ಬಿಜೆಪಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ನಾಯಕರು ಟೇಪ್ ಕತ್ತರಿಸಿ ಹೆಸರು ಪಡೆದುಕೊಳ್ಳುತ್ತಿದ್ದಾರೆ. ಆರೋಗ್ಯ ಸಚಿವರು ಈ ಕಡೆಗೆ ಬಂದಿದ್ದರೆ, ನಮ್ಮಲ್ಲಿ ಮೆಡಿಕಲ್ ಕಾಲೇಜು ಹೇಗೆ ನಿರ್ಮಿಸಲಾಗಿದೆ ಎಂದು ತೋರಿಸುತ್ತಿದ್ದೆ ಎಂದರು. ಇದನ್ನೂ ಓದಿ: ಹೈಟೆಕ್ ಮಾರುಕಟ್ಟೆ ನಿರ್ಮಿಸಲು ಸಜ್ಜಾದ ಚಿಕ್ಕಬಳ್ಳಾಪುರ
ಜಿಲ್ಲೆಯಲ್ಲಿ ಮೇಗಾ ಡೇರಿ ಮಾತ್ರ ಆಗಿದೆ. ಆದರೆ ಪ್ಯಾಕೆಟ್, ಪನೀರ್ ಘಟಕ ಆಗಿಲ್ಲ. ಐಸ್‌ಕ್ರೀಮ್ ಘಟಕವನ್ನು ಚಿಂತಾಮಣಿಗೆ ತೆಗೆದುಕೊಂಡು ಹೋಗಲಾಗಿದೆ. ಡೇರಿಯಲ್ಲಿ 5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಉತ್ಪಾದನೆ ಹೆಚ್ಚಳವಾದರೆ ಅದಕ್ಕೆ ಯಾವುದೇ ಸೌಲಭ್ಯವಿಲ್ಲ. ರಾಜಕೀಯ ದೃಷ್ಟಿಕೋನದಿಂದ ಎಲ್ಲವನ್ನೂ ನೋಡುತ್ತಿರುವುದರಿಂದ ಹೀಗಾಗಿದೆ. ರೈತರಿಗೆ ಬೇರೆ ಕಡೆ ಮಾರುಕಟ್ಟೆಗೆ ಜಾಗ ಮಂಜೂರು ಮಾಡಲಾಗಿದೆ. ರೇಷ್ಮೆ ಹೈಟೆಕ್ ಮಾರುಕಟ್ಟೆ ಯೋಜನೆಯನ್ನು ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದು, ಅದಕ್ಕಾಗಿ ಕಾಂಗ್ರೆಸ್ ನಾಯಕರು ಹೆಸರು ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.
ಎತ್ತಿನಹೊಳೆ ಯೋಜನೆಗೆ ಹಣ ನೀಡಿದ್ದು ಬಿಜೆಪಿ
ಎತ್ತಿನಹೊಳೆ ಯೋಜನೆಯಡಿ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ ನೀರು ಬಂದಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ 9,200 ಕೋಟಿ ರೂ. ಅನುದಾನವನ್ನು ಯೋಜನೆಗೆ ನೀಡಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ ನಾಯಕರು ಒಂದೇ ಒಂದು ಮಾತು ಹೇಳಿಲ್ಲ. ಮನಸ್ಸು ಮಾಡಿದ್ದರೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಯೋಜನೆ ಉದ್ಘಾಟನೆ ಮಾಡಬಹುದಿತ್ತು. ಬೇಕಿದ್ದರೆ ಇದರ ಕೀರ್ತಿಯನ್ನು ಕಾಂಗ್ರೆಸ್ ಸರ್ಕಾರ ಪಡೆದುಕೊಳ್ಳಲಿ. ಆದರೆ ಎರಡನೇ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲಿ. ಜೊತೆಗೆ ವಿನ್ಯಾಸ ಮಾಡಿದಂತೆಯೇ ಯೋಜನೆಯನ್ನು ಅನುಷ್ಠಾನ ಮಾಡಲಿ ಎಂದು ಒತ್ತಾಯಿಸಿದರು.
ಯಾವುದೇ ಚುನಾವಣೆಯಲ್ಲಿ ಕಾಂಗ್ರೆಸ್ ವಾಮಮಾರ್ಗದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ವಿರುದ್ಧ ದ್ವೇಷ ಸಾಧಿಸಿದರೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದರು.