ಬಿಬಿಎಂಪಿ ಬಜೆಟ್ ಗೆ ದಿನಗಣೆ

ಬಿಬಿಎಂಪಿ ಬಜೆಟ್ ಗೆ ದಿನಗಣೆ

ಬೆಂಗಳೂರು: ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ನಗರದ ನಾಗರೀಕರ ಮನ ಗೆಲ್ಲಲು ಬಿಬಿಎಂಪಿ ಬಜೆಟ್‍ನಲ್ಲಿ ಇನ್ನಿಲ್ಲದ ಕಸರತ್ತು ನಡೆಸಲಾಗಿದ್ದು, ಈ ಬಾರಿ ಅಂದಾಜು 9 ಸಾವಿರ ಕೋಟಿ ರೂ.ಗಳ ಬಜೆಟ್ ಮಂಡನೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಮೇಲಿನ ಚರ್ಚೆ ಇಂದು ಕೊನೆಗೊಳ್ಳಲಿದ್ದು, ನಾಳೆ ಡಿಸಿಎಂ ಶಿವಕುಮಾರ್ ಅವರು ಬಿಬಿಎಂಪಿ ಬಜೆಟ್ ಪ್ರತಿಯನ್ನು ಪರಿಶೀಲಿಸಿ ಓಕೆ ನೀಡಿದ ನಂತರ ಬಿಬಿಎಂಪಿ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆಗಳಿವೆ.

ಮಾರ್ಚ್ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆಗಳಿರುವುದರಿಂದ ಮಾ.5ರೊಳಗೆ ಬಿಬಿಎಂಪಿ ಬಜೆಟ್ ಮಂಡನೆ ಮಾಡಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಾಲಿಕೆ ಮೂಲಗಳು ಈ ಸಂಜೆಗೆ ತಿಳಿಸಿವೆ. ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ 3 ಸಾವಿರ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿ 6000 ಸಾವಿರ ಕೋಟಿ ರೂ.ಗಳ ಆಸ್ತಿ ತೆರಿಗೆ ಸಂಗ್ರಹದ ಗುರಿ ನೀಡಿರುವುದರಿಂದ ಈ ಬಾರಿ ಸರಿಸುಮಾರು 9 ಸಾವಿರ ಕೋಟಿ ರೂ.ಗಳ  ಬಜೆಟ್ ಮಂಡನೆಯಾಗುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ.

 

 

Related