ತಂದೆ-ಮಗಳು ಸ್ಥಳದಲ್ಲೇ ಮೃತ

ತಂದೆ-ಮಗಳು ಸ್ಥಳದಲ್ಲೇ ಮೃತ

ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಗ್ರಾಮದ ಹತ್ತಿರ ಬೆಳಗ್ಗೆ ಗ್ಯಾಸ್ ಟ್ಯಾಂಕರ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಯಲ್ಲಾಪುರ ಅಗ್ನಿ ಶಾಮಕ ದಳದಲ್ಲಿ ಲೀಡಿಂಗ್ ಫೈರ್‌ಮ್ಯಾನ್‌ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದರಕರ್(56) ಹಾಗೂ ಅವರ ಪುತ್ರಿ ಸುನೇಹಾ ಕಿಂದರಕರ್(14) ಎಂದು ಗುರುತಿಸಲಾಗಿದೆ. ತನ್ನ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿರುವಾಗ ಹಿಂದಿನಿಂದ ವೇಗವಾಗಿ ಬಂದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಪೊಲೀಸರು ಸ್ಥಳಕ್ಕೆ ಬಂದು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ವ್ಯತ್ಯಯ ಉಂಟಾಗಿತ್ತು.

3-4 ದಿನಗಳ ಹಿಂದೆ ಇದೇ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆಯ ಕರಾಳ ನೆನಪು ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ತಾಲೂಕಿನ ಜನರ ಆತಂಕ ಹೆಚ್ಚಲು ಕಾರಣವಾಗಿದೆ.

Related