ಮೈಸೂರು: ಮುಡಾ ಹಗರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದಲ್ಲ ಒಂದು ಕಂಟಕ ಎದುರಾಗುತ್ತಲೇ ಇದೆ.
ಈಗಾಗಲೇ ಮುಡಾ ಪ್ರಕಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಬೆನ್ನಲ್ಲೇ ಮತ್ತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ವಿರುದ್ಧ ದೂರು ದಾಖಲಾಗಿದೆ.
ಹೌದು, ಮೈಸೂರಿನಲ್ಲಿ ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ. ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ನಿನ್ನೆ (ಬುಧವಾರ ಆ. 27) ರಂದು ದೂರು ನೀಡಿದ್ದಾರೆ. ಇದನ್ನೂ ಓದಿ: ಬೆಳ್ಳಂ ಬೆಳಗೆ ಬಿ ನಾಗೇಂದ್ರ ಆಪ್ತರ ಮನೆಗಳ ಮೇಲೆ ಇಡಿ ದಾಳಿ
ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಸಹಚರರ ವಿರುದ್ಧವೂ ಕ್ರಮ ವಹಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆಯೇ ದೂರು ದಾಖಲಾಗಿದೆ. ಪತ್ರದಲ್ಲಿರುವ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
.