Mangalore Golibar

  • In State
  • February 4, 2020
  • 465 Views
Mangalore Golibar

ಬೆಂಗಳೂರು, ಫೆ. 4 : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್ ಕುರಿತು ಸಲ್ಲಿಕೆಯಾಗಿರುವ ದೂರುಗಳು, ಅವುಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡುವಂತೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಅಲ್ಲದೆ, ಘಟನೆ ಸಂಬಂಧ ಸಿಸಿಟಿವಿಗಳಲ್ಲಿ ದಾಖಲಾಗಿರುವ, ಸಾರ್ವಜನಿಕರು ಮತ್ತು ಪೊಲೀಸರು ಚಿತ್ರೀಕರಿಸಿರುವ ವಿಡಿಯೋಗಳನ್ನು ಸಂರಕ್ಷಿಸಿಡಬೇಕು. ಆ ಕುರಿತು ನ್ಯಾಯಾಲಯಕ್ಕೆ ಮಾಹಿತಿ ಒದಗಿಸಬೇಕು. ಖಾಸಗಿ ವ್ಯಕ್ತಿಗಳು ಮತ್ತು ಮಾಧ್ಯಮದವರು ಚಿತ್ರೀಕರಿಸಿರುವ ವಿಡಿಯೋಗಳನ್ನು ನೀಡುವಂತೆ ಮಂಗಳೂರು ಜಿಲ್ಲಾಧಿಕಾರಿ ಸಾರ್ವಜನಿಕ ಪ್ರಕಟಣೆ ನೀಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.
ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ದೂರುಗಳನ್ನು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸುತ್ತಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ಜೊತೆಗೆ, ಪ್ರಕರಣದ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದರು.
ವಿಚಾರಣೆ ವೇಳೆ ವಿವರಣೆ ನೀಡಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ, ಪ್ರಕರಣವನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದೆ. ಪೊಲೀಸರು ದೂರುಗಳನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಫೆ. 6ರಂದು ಜಿಲ್ಲಾ ಮ್ಯಾಜಿಸ್ಟ್ರೇಟ್ 176 ಸಾಕ್ಷಿಗಳ ಹೇಳಿಕೆ ಪಡೆಯಲಿದ್ದಾರೆ ಎಂದು ವಿವರಿಸಿದರು.

Related