ಮೋದಿ ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ: ಸಿಎಂ

ಮೋದಿ ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ: ಸಿಎಂ

ಬೆಂಗಳೂರು: ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ನರೇಂದ್ರ ಮೋದಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ನ ನಾಯಕರುಗಳನ್ನು ಆಹ್ವಾನ ನೀಡದ್ದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದರು.

ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ.

ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್‌.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ.

ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ.

ಆದರೆ ರಾಮಜನ್ಮಭೂಮಿ ವಿವಾದ ಧಾರ್ಮಿಕ ಶ್ರದ್ದೆಯ ಪ್ರಶ್ನೆ, ಅದು ನ್ಯಾಯಾಲಯದಲ್ಲಿ ತೀರ್ಮಾನ ಮಾಡುವಂತಹದ್ದಲ್ಲ ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ಮತ್ತು ಆರ್.ಎಸ್.ಎಸ್, ವಿಶ್ವಹಿಂದೂ ಪರಿಷತ್ ಮೊದಲಾದ ಸಂಘಟನೆಗಳು ಸುಪ್ರೀಂ ಕೋರ್ಟ್ ತೀರ್ಪು ತಮ್ಮ ಪರವಾಗಿ ಹೊರಬಿದ್ದ ಕೂಡಲೇ ಅದನ್ನು ಒಪ್ಪಿಕೊಂಡಿರುವುದು ಈ ಸಂಘಟನೆಗಳ ನಾಯಕರ ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ ಎಂದರು.

 

Related