ಇನ್ಮುಂದೆ ಶಾಲಾ-ಕಾಲೇಜು ಸಮಯ ಬದಲಾವಣೆ!

ಇನ್ಮುಂದೆ ಶಾಲಾ-ಕಾಲೇಜು ಸಮಯ ಬದಲಾವಣೆ!

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿನಿತ್ಯ ಉಂಟಾಗುವ ಸಂಚಾರದಟ್ಟಣೆಯಿಂದ ಒಂದಲ್ಲ ಒಂದು ಸಮಸ್ಯೆಗಳನ್ನು ಶಾಲಾ-ಕಾಲೇಜು ಮಕ್ಕಳು ಹಾಗೂ ಕೈಗಾರಿಕಾ ವಾಣಿಜ್ಯ ಕ್ಷೇತ್ರಗಳಲ್ಲಿ ಕೆಲಸ ಮಾಡುವಂಥವರು ಈ ಸಮಸ್ಯೆಯನ್ನು ಎದುರಿಸಬೇಕಾಗಿದೆ. ಈ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳ ಸಮಯವನ್ನು ಬದಲಾಯಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬರುತ್ತದೆ.

ಇನ್ನು ನಗರದಲ್ಲಿ ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ವಿವಿಧ ಕಂಪೆನಿಗಳ ಕೆಲಸದ ಅವಧಿ ಬದಲಾವಣೆ ಮಾಡುವ ಸಾಧ್ಯತೆಯ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಗ್ರವಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮತ್ತೆ 8 ವಾರಗಳ ಕಾಲಾವಕಾಶ ನೀಡಿದೆ.

ಈ ಸಂಭಂದ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕಳೆದ (ಸೆ.12ರಂದು) ವಿಚಾರಣೆಯಲ್ಲಿ ನ್ಯಾಯಾಲಯವು ಬೆಂಗಳೂರು ನಗರದಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರದ ದಟ್ಟಣೆ ಸಮಸ್ಯೆ ನಿವಾರಿಸಬೇಕಿದೆ. ಈ ನಿಟ್ಟಿನಲ್ಲಿ ಶಾಲೆಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡುವ ಕುರಿತಂತೆ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮೂಲಕ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಬಸ್‌ ಆಪರೇಟರ್‌ಗಳು, ಪೋಷಕರ ಸಂಘಗಳು ಪ್ರತಿನಿಧಿಗಳ ಜೊತೆಗೆ ಸಭೆ ಕರೆದು ಸಮಾಲೋಚಿಸಿ ಆರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು, ಹೈಕೋರ್ಟ್‌ ನಿರ್ದೇಶನದಂತೆ ಸಂಬಂಧಪಟ್ಟವರ ಜೊತೆಗೆ ಸರ್ಕಾರ ಸಮಾಲೋಚನೆ ನಡೆಸಿದೆ. ಅಕ್ಟೋಬರ್‌ 5ರಂದು ಕಾರ್ಮಿಕ ಇಲಾಖೆ, ಎಫ್‌ಕೆಸಿಸಿಐ, ವಾಣಿಜ್ಯೋದ್ಯಮಿಗಳು ಹಾಗೂ ಕಾರ್ಮಿಕರ ಒಕ್ಕೂಟಗಳ ಪ್ರತಿನಿಧಿಗಳ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. ಅಕ್ಟೋಬರ್‌ 9ರಂದು ಶಾಲಾ ಆಡಳಿತ ಮಂಡಳಿ, ಪೋಷಕರ ಒಕ್ಕೂಟದೊಂದಿಗೆ ಸಭೆ ನಡೆಸಲಾಯಿತು. ಹಾಗೆಯೇ, ಸಾರಿಗೆ ಮತ್ತು ಸಂಚಾರ ವಿಭಾಗದ ಪೊಲೀಸ್‌ ಇಲಾಖೆ ಅಧಿಕಾರಿಗಳೊಂದಿಗೂ ಸಭೆ ನಡೆಸಲಾಗಿದೆ. ಸಂಚಾರ ದಟ್ಟಣೆಗೆ ಪರಿಹಾರ ಕಂಡುಹಿಡಿಯಲು ಸಮಾಲೋಚನೆ‌ ಪ್ರಕ್ರಿಯೆ ಮುಂದುವರಿಯಲಿದ್ದು, ಅಂತಿಮ ಅಭಿಪ್ರಾಯ ಕುರಿತಂತೆ ವರದಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.

 

Related