ಎಸ್ ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ: ಸಿಎಂ

ಎಸ್ ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ: ಸಿಎಂ

ಬೆಂಗಳೂರು: ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ ತೋರದೆ ತಮ್ಮ ಬದ್ಧ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ʼಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’ ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದರು.

ಇದನ್ನೂ ಓದಿ: ಗಮನ ಸೆಳೆದ ಸಖಿ ಮತಗಟ್ಟೆ

ಎಸ್ ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್ ಐಟಿ ರಚಿಸಲಾಗಿದೆ.

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು.

ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ  ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದರು.

Related