ರಾಜ್ಯ ಸರ್ಕಾರ ಕೇಂದ್ರದ ಗುಲಾಮ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ಕೇಂದ್ರದ ಗುಲಾಮ: ಸಿದ್ದರಾಮಯ್ಯ

ಬೆಂಗಳೂರು : ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಕ್ಷದ ವತಿಯಿಂದ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೆಟ್ರೋಲ್, ಡೀಸೆಲ್ ಅತ್ಯಂತ ದುಬಾರಿಯಾಗಿದೆ. ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ಜನಪರ ಹೋರಾಟ ಕೈಗೆತ್ತಿಕೊಳ್ಳಬೇಕು. ಕಳೆದ ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು 18 ಲಕ್ಷ ಕೋಟಿ ಸಂಗ್ರಹ ಮಾಡಿರುವ ಮಾಹಿತಿ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್, ಡೀಸೆಲ್ 25 ರೂ. ಆಸುಪಾಸಿನಲ್ಲಿ ಮಾರಾಟವಾಗಬೇಕಿತ್ತು. ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರಿಸ್ಥಿತಿ ನಿರ್ವಹಣೆಗೆ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡದೆ ಜನರಿಗೆ ಎರಡೂ ಸರ್ಕಾರಗಳು ದ್ರೋಹ ಮಾಡಿವೆ. ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಬಡಿದಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಲಾಕ್ ಡೌನ್ ತೆಗೆದ ಬಳಿಕ ಕೊರೊನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆದರೆ, ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ. ರೈತರು ಮತ್ತಿತರ ಸಮುದಾಯಗಳಿಗೆ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಈ ವರೆಗೆ ತಲುಪಿಲ್ಲ. ಲಾಕ್ ಡೌನ್ ಸಮಯದಲ್ಲೇ ಜನರ ಕೈಗೆ ಹಣ ಕೊಟ್ಟಿದ್ದರೆ ಅವರಿಗೆ ಈಗ ಕಷ್ಟ ಬರುತ್ತಿರಲಿಲ್ಲ.

ಕೊರೊನಾ ವಿಚಾರದಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ. ಮುಂದೆ ನಾವು ಅಮೆರಿಕ ಮೀರಿಸುವ ಪರಿಸ್ಥಿತಿ ಇದೆ. ಜಿಡಿಪಿಯಲ್ಲಿ ಶೇ.1ರಷ್ಟನ್ನೂ ಸರ್ಕಾರ ಸೋಂಕು ನಿಯಂತ್ರಣಕ್ಕೆ ಖರ್ಚು ಮಾಡಿಲ್ಲ.

ಎಪಿಎಂಸಿ ರಾಜ್ಯದ ಪಟ್ಟಿಯಲ್ಲಿ ಬರುವ ವಿಷಯ. ಆದರೂ ಕೇಂದ್ರ ಸರ್ಕಾರ ಮೂಗು ತೂರಿಸುತ್ತಿದೆ. ರಾಜ್ಯ ಸರ್ಕಾರ ಕೇಂದ್ರದ ಗುಲಾಮನಂತೆ ವರ್ತಿಸುತ್ತಿದೆ. ತಿದ್ದುಪಡಿ ಆರಂಭದಲ್ಲಿ ಚೆನ್ನಾಗಿ ಕಂಡರೂ ಮುಂದಿನ ದಿನಗಳಲ್ಲಿ ರೈತರು ಬೀದಿ ಪಾಲಾಗುತ್ತಾರೆ ಎಂದು ಹೇಳಿದರು.

Related