ನರಹಂತಕ ರಾಜಕಾರಣ ನಿಲ್ಲಲಿ – ಹೆಚ್ಡಿಕೆ

ನರಹಂತಕ ರಾಜಕಾರಣ ನಿಲ್ಲಲಿ – ಹೆಚ್ಡಿಕೆ

ಬೆಂಗಳೂರು ಜು 28 : ಮಾಡದ ಸಾಧನೆಗಳ ಹೆಸರನಲ್ಲಿ ರಾಜ್ಯ ಸರಕಾರವೂ ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ ಅವರು, ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ ಎಂದು ಚಾಟಿ ಬೀಸಿದ್ದಾರೆ.

ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ ಎಂದು ಅವರು ಟಾಂಗ್ ನೀಡಿದ್ದಾರೆ.

ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರ್ಕಾರದ ವರ್ಷದ ಸಾಧನೆ!! ಎಂದು ಅವರು ಟೀಕಿಸಿದ್ದಾರೆ.

ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related