ನೆರೆಯ ರಾಜ್ಯಗಳಿಗೆ ಸಾರಿಗೆ ಸಂಚಾರ?

ನೆರೆಯ ರಾಜ್ಯಗಳಿಗೆ ಸಾರಿಗೆ ಸಂಚಾರ?

ಬೆಂಗಳೂರು: ದೇಶಾದ್ಯಂತ ಈಗ ಲಾಕ್‍ಡೌನ್ ಸಡಿಲಗೊಳಿಸಿರುವುದರಿಂದ ನಮ್ಮ ರಾಜ್ಯದಿಂದ ಇತರ ರಾಜ್ಯಗಳಿಗೆ ಅದರಲ್ಲೂ ಮುಖ್ಯವಾಗಿ ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಪುನ: ಬಸ್ ಸಂಚಾರ ಪ್ರಾರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸಜ್ಜಾಗಿವೆ. ಆದರೆ ಪಕ್ಕದ ಈ ಎಲ್ಲಾ ರಾಜ್ಯಗಳಿಂದ ಇದಕ್ಕೆ ಹಸಿರು ನಿಶಾನೆ ದೊರೆಯಬೇಕಿದೆ. ತದನಂತರ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಪರಿಸ್ಥಿತಿ ಸುಧಾರಣೆಗೊಂಡ ನಂತರ ಈಗಾಗಲೇ ಆಂಧ್ರ ಪ್ರದೇಶಕ್ಕೆ ಕರ್ನಾಟಕದಿಂದ ನಮ್ಮ ಸರ್ಕಾರಿ ಸಾರಿಗೆ ಬಸ್‍ಗಳ ಸಂಚಾರವನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ನಮ್ಮ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದೆ.  ಈ ಎಲ್ಲಾ ರಾಜ್ಯಗಳಿಂದ ಶೀಘ್ರವೇ ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯಬಹುದು ಎಂಬ ನಿರೀಕ್ಷೆಯೂ ಎಂದರು.

ಲಾಕ್‍ಡೌನ್‍ಗಿಂತ ಮುಂಚೆ ನಮ್ಮ ರಾಜ್ಯದಿಂದ ಒಟ್ಟು 2500 ಸರ್ಕಾರಿ ಬಸ್‍ಗಳು ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಈಗ ಮುಂಚಿನಂತೆ ಮತ್ತೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

Related