ಬಿಜೆಪಿ ಗೂಂಡಾಗಳಿಗೆ ನಾವು ಹೆದರಲ್ಲ: ಡಿಸಿಎಂ

ಬಿಜೆಪಿ ಗೂಂಡಾಗಳಿಗೆ ನಾವು ಹೆದರಲ್ಲ: ಡಿಸಿಎಂ

ಬೆಂಗಳೂರು: ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಜ. 23 ಮಂಗಳವಾರ) ಇಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ.

ರಾಹುಲ್ ಗಾಂಧಿ ಅವರು ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ.

ದೇಶದ ಐಕ್ಯತೆ, ಸಮಗ್ರತೆ ಶಾಂತಿಗೆ ಸಾವಿರಾರು ಕಾಂಗ್ರೆಸ್ ನಾಯಕರು ಪ್ರಾಣತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ತನ್ನ ಅಜ್ಜಿಗೆ ಗುಂಡು ಹಾರಿಸಿ ಕೊಂದಿದ್ದನ್ನು, ಅವರ ಚಿಕ್ಕಪ್ಪ ಸಂಜಯ್ ಗಾಂಧಿ ಹತ್ಯೆಯನ್ನು, ತನ್ನ ತಂದೆ ರಾಜೀವ್ ಗಾಂಧಿ ಮೇಲೆ ಬಾಂಬ್ ದಾಳಿ ಮಾಡಿ, ಹತ್ಯೆ ಮಾಡಿದ್ದನ್ನು ಚಿಕ್ಕ ವಯಸ್ಸಿನಲ್ಲೇ ಕಂಡಿದ್ದಾರೆ. ಇಷ್ಟು ದುಖಃ ಅನುಭವಿಸಿದ್ದರೂ ಅವರು ದೇಶದ ಒಗ್ಗಟ್ಟಿಗಾಗಿ ಯಾತ್ರೆ ಮಾಡುತ್ತಿದ್ದಾರೆ. ಅದನ್ನು ನೋಡಿ ಬಿಜೆಪಿಯವರಿಂದ ಸಹಿಸಲು ಆಗುತ್ತಿಲ್ಲ. ಬಿಜೆಪಿಯ ಯಾವುದಾದರೂ ಒಬ್ಬ ನಾಯಕ ಇಂತಹ ತ್ಯಾಗ ಮಾಡಿದ್ದಾರಾ? ಕಾಂಗ್ರೆಸ್ ಪಕ್ಷ ಮಾತ್ರ ಇಂತಹ ಯಾತ್ರೆ ಮಾಡಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದರು.

 

Related