ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ: ಸಿಎಂ

ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ: ಸಿಎಂ

ಪಿರಿಯಾಪಟ್ಟಣ: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು‌. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡಿದರು.

ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ‌. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿ ಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ ಎಂದು ಕರೆ ನೀಡಿದರು.

ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ ಜನರಿಗೆ ಇದರಿಂದ ಲಾಭ ಆಗುತ್ತಿದೆ. ಇದು ನಮ್ಮ ಸರ್ಕಾರ ಪಿರಿಯಾಪಟ್ಟಣದಲ್ಲಿ ನಿರ್ವಹಿಸಿದ ಜವಾಬ್ದಾರಿ ಎಂದರು.

ಇಲ್ಲಿಯವರೆಗೂ 139 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದಾಗ ಸಾರ್ವಜನಿಕರು ಸಂಭ್ರಮದಿಂದ ಚಪ್ಪಾಳೆ ತಟ್ಟಿ ಸ್ವಾಗತಿಸಿದರು.

ರೇಷ್ಮೆ ಮತ್ತು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ.ಮಹದೇವಪ್ಪ, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಹಾಗೂ ಶಾಸಕರುಗಳಾದ ಮರಿತಿಬ್ಬೇಗೌಡ, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಸಿ.ಅನಿಲ್ ಕುಮಾರ್, ಕೆ.ಹರೀಶ್ ಗೌಡ, ಮಂಥರ್ ಗೌಡ, ಡಾ.ಡಿ.ತಿಮ್ಮಯ್ಯ, ಸಚಿವ ಕೆ.ವೆಂಕಟೇಶ್ ಅವರ ಪುತ್ರ ಯುವ ಮುಖಂಡ ನಿತಿನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Related