ಅನ್ಯಾಯ ಸರಿಪಡಿಸಕ್ಕಾಗದ ಸರಕಾರ ಯಾರಿಗೆ ಬೇಕು?: ಡಿಸಿಎಂ

ಅನ್ಯಾಯ ಸರಿಪಡಿಸಕ್ಕಾಗದ ಸರಕಾರ ಯಾರಿಗೆ ಬೇಕು?: ಡಿಸಿಎಂ

ದೆಹಲಿ: ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.

ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣ ಕಾಸು ಆಯೋಗದ ಮುಂದೆ ಇದೆ. ಕೇಂದ್ರ ಸರ್ಕಾರದ ಕೈಯಲ್ಲಿಲ್ಲ ಎಂದು ಶ್ರೀಮತಿ ನಿರ್ಮಲಾ ಸೀತರಾಮನ್ ಅವರು ಹೇಳಿದ್ದಾರೆ. ನಿಮ್ಮ ಬಳಿ ಅಧಿಕಾರವೇ ಇಲ್ಲವಾದರೆ ಸರ್ಕಾರ ಯಾಕಿರಬೇಕು? ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ?.

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಮನುಷ್ಯ ಹುಟ್ಟಿದ ನಂತರ ಏನಾದರೂ ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು. ಅದರಂತೆ ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಗುಡ್ಡೆಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ ಎಂದರು.

Related